ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ 'ಮ್ಯಾನ್ ಆಫ್ ದಿ ಮ್ಯಾಚ್' ಆಗಿದ್ದಾರೆ. ಅವರೇ ವಿರೋಧ ಪಕ್ಷದ ನಾಯಕ ಸ್ಥಾನ ವಹಿಸಬೇಕು ಎಂದು ಕಾಂಗ್ರೆಸ್ ಸಂಸದ ಮತ್ತು ನಾಯಕ ಶಶಿ ತರೂರ್ ಒತ್ತಾಯಿಸಿದ್ದಾರೆ.
ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಕಾಂಗ್ರೆಸ್‌ನ ಹಲವು ನಾಯಕರು ರಾಹುಲ್ ಗಾಂಧಿ ಪರ ಒಲವು ತೋರಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಹಾಗೂ ಸಂಸದೀಯ ಪಕ್ಷದ ಸಭೆಯಲ್ಲಿ ಈ ಕುರಿತು ಚರ್ಚೆಯಾಗುವ ಸಾಧ್ಯತೆಯಿದೆ.
ಇದ ಮಧ್ಯೆ ಶಶಿ ತರೂರ್ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. 'ರಾಹುಲ್ ಹಾಗೂ ಮಲ್ಲಿಕಾರ್ಜುನ ಖರ್ಗೆ ದೇಶದಾದ್ಯಂತ ವ್ಯಾಪಕ ಪ್ರಚಾರ ನಡೆಸಿದ್ದಾರೆ. ಖರ್ಗೆ ಅವರು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹಾಗಾಗಿ ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹುದ್ದೆ ವಹಿಸುವುದು ಸೂಕ್ತವೆನಿಸಲಿದೆ. ಈ ವಿಷಯದಲ್ಲಿ ಖಂಡಿತವಾಗಿಯೂ ನನ್ನ ಅಭಿಪ್ರಾಯ ತಿಳಿಸಿದ್ದೇನೆ' ಎಂದು ಹೇಳಿದ್ದಾರೆ.
ಲೋಕಸಭೆಯಲ್ಲಿ ಬಿಜೆಪಿ ಬಳಿಕ 99 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್, ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಅಲ್ಲದೆ ಆಡಳಿತ ಪಕ್ಷವನ್ನು ಎದುರಿಸಲು ಹೆಚ್ಚಿನ ಸಂಖ್ಯಾ ಬಲ ಹೊಂದಿರುವ ಪಕ್ಷದ ಜನಪ್ರಿಯ ನಾಯಕ ವಿಪಕ್ಷದ ಸ್ಥಾನ ವಹಿಸುವುದು ಹೆಚ್ಚು ಸೂಕ್ತವೆನಿಸಲಿದೆ ಎಂದು ಅವರು ಹೇಳಿದ್ದಾರೆ.
ಕೇರಳದ ತಿರುವನಂತಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ರಾಜೀವ್ ಚಂದ್ರಶೇಖರ್ ವಿರುದ್ಧ ತರೂರ್ 16,077 ಮತಗಳ ಅಂತರದ ಜಯ ಸಾಧಿಸಿದ್ದರು.<>