ನವದೆಹಲಿ: ದೆಹಲಿ ಸ್ಫೋಟದ ಪಿತೂರಿಯ ಹಿಂದಿರುವವರನ್ನು ನ್ಯಾಯದ ಕಟಕಟೆಗೆ ತರಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ವಾರ್ನಿಂಗ್ ನೀಡಿದ್ದಾರೆ.
ದೆಹಲಿಯಲ್ಲಿ ಈಚೆಗೆ ಸಂಭವಿಸಿದ ಭೀಕರ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ.
ಮೋದಿ ಅವರು ಭೂತಾನ್ ಪ್ರವಾಸದಿಂದ ಮರಳಿದ ಕೂಡಲೇ ದೆಹಲಿಯ ಲೋಕ ನಾಯಕ್ ಜೈ ಪ್ರಕಾಶ್ ಆಸ್ಪತ್ರೆಗೆ ಭೇಟಿ ನೀಡಿದರು. ಕೆಂಪು ಕೋಟೆ ಬಳಿ ನಡೆದ ಸ್ಫೋಟದಲ್ಲಿ ಗಾಯಗೊಂಡವರನ್ನು ಭೇಟಿಯಾದರು.
ಎರಡು ದಿನಗಳ ಭೂತಾನ್ ಪ್ರವಾಸದಲ್ಲಿದ್ದ ಪ್ರಧಾನಿ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ, ಅಲ್ಲಿಂದ ನೇರವಾಗಿ ಆಸ್ಪತ್ರೆಗೆ ತೆರಳಿದರು. ಗಾಯಾಳುಗಳನ್ನು ಪ್ರತ್ಯೇಕವಾಗಿ ಭೇಟಿಯಾದ ಪ್ರಧಾನಿ ಮೋದಿ, ಅವರೆಲ್ಲರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.
ಈ ಕುರಿತಾಗಿ ತಮ್ಮ ಎಕ್ಸ್ ಖಾತೆಯ ಮೂಲಕ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ, ದೆಹಲಿಯಲ್ಲಿ ನಡೆದ ಸ್ಫೋಟದ ಸಂದರ್ಭದಲ್ಲಿ ಗಾಯಗೊಂಡವರನ್ನು ಎಲ್‌ಎನ್‌ಜೆಪಿ ಆಸ್ಪತ್ರೆಗೆ ಹೋಗಿ ಭೇಟಿಯಾದೆ. ಎಲ್ಲರೂ ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.