Publish Date: Tue, 13 Sep 2022 (15:27 IST)
Updated Date: Tue, 13 Sep 2022 (15:30 IST)
ಹೈದರಾಬಾದ್ : ತೆಲಂಗಾಣದ ಸಿಕಂದರಾಬಾದ್ನಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಇಂದು ಮುಂಜಾನೆ ಬೆಂಕಿ ಹೊತ್ತಿಕೊಂಡ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಕಟ್ಟಡದ ನೆಲಮಹಡಿಯಲ್ಲಿರುವ ರೂಬಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಶೀಘ್ರದಲ್ಲೇ ಮೊದಲ ಮತ್ತು ಎರಡನೇ ಮಹಡಿಗೂ ವ್ಯಾಪಿಸಿದೆ. ಪರಿಣಾಮವಾಗಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.