ನವದೆಹಲಿ: ನರೇಂದ್ರ ಮೋದಿ ಅವರು ಮೂರನೇ ಬಾರಿ ಭಾರತದ ಪ್ರಧಾನಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೇ ವೇಳೆ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಶುಭ ಕೋರಿದ್ದಾರೆ.
ಭಾರತದ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾನುವಾರ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ನೆರೆಯ ರಾಷ್ಟ್ರ ಪಾಕಿಸ್ತಾನವನ್ನು ಹೊರತುಪಡಿಸಿ ಬಾಂಗ್ಲಾದೇಶ, ನೇಪಾಳ, ಭೂತಾನ್, ಶ್ರೀಲಂಕಾ, ಮಾಲ್ದೀವ್ಸ್‌ನ ನಾಯಕರಿಗೆ ಆಹ್ವಾನ ನೀಡಲಾಗಿತ್ತು. ಅಲ್ಲಿನ ಪ್ರಧಾನಿಗಳು ಕಾರ್ಯಕ್ರಮಕ್ಕೆ ಬಂದಿದ್ದರು.
ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ಬಗ್ಗೆ ಈಚೆಗೆ ಪ್ರತಿಕ್ರಿಯಿಸಿದ್ದ ಪಾಕಿಸ್ತಾನ, ಮಾತುಕತೆಯ ಮೂಲಕ ವಿವಾದ ಬಗೆಹರಿಸುವುದರೊಂದಿಗೆ ಭಾರತದೊಂದಿಗೆ ಉತ್ತಮ ಬಾಂಧವ್ಯ ಕಾಪಾಡಿಕೊಳ್ಳಲು ಬಯಸುತ್ತಿರುವುದಾಗಿ ಹೇಳಿಕೊಂಡಿತ್ತು.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದ ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಕಚೇರಿಯ ವಕ್ತಾರರಾದ ಮುಮ್ತಾಜ್ ಜಹ್ರಾ ಬಲೋಚ್, 'ಭಾರತದಿಂದ ಎದುರಾಗುವ ತೊಂದರೆಗಳ ಹೊರತಾಗಿಯೂ ಪಾಕಿಸ್ತಾನವು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿದೆ' ಎಂದು ಹೇಳಿದ್ದರು.<>