ಲಕ್ನೋ: ಉತ್ತರ ಪ್ರದೇಶದಲ್ಲಿ ಪ್ರತಿಭಟನೆಯ ವೇಳೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಸಾವನ್ನಪ್ಪಿದ್ದಕ್ಕೆ ಬಿಜೆಪಿಯೇ ಕಾರಣ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ದೂರಿದ್ದಾರೆ.
ಉತ್ತರ ಪ್ರದೇಶ ಮತ್ತು ಅಸ್ಸಾಂನಲ್ಲಿ ಬಿಜೆಪಿ ಸರ್ಕಾರವಿದೆ. ಇಲ್ಲಿ ಪ್ರತಿಭಟನೆ ವೇಳೆ ಬಿಜೆಪಿ ಸರ್ಕಾರ ಅಗತ್ಯಕ್ಕಿಂತ ಹೆಚ್ಚು ಪೊಲೀಸ್ ಪಡೆಯನ್ನು ನಿಯೋಜಿಸಿದ್ದೇ ಕಾರ್ಯಕರ್ತರ ಸಾವಿಗೆ ಕಾರಣ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಕಾರ್ಯಕರ್ತರ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕಾರ್ಯಕರ್ತರ ಸಾವಿಗೆ ಬಿಜೆಪಿ ಮೇಲೆ ಆಕ್ರೋಶ ವ್ಯಕ್ತಪಡಿಸಿದೆ. ಗುವಾಹಟಿಯ ರಾಜಭವನದ ಮುಂದೆ ಪ್ರತಿಭಟನೆ ನಡೆಸುವಾಗ ಪೊಲೀಸರು ಅಶ್ರುವಾಯು ಸಿಡಿಸಿದ್ದರು. ಇದರಿಂದಾಗಿ 45 ವರ್ಷದ ಮೃದುಲ್ ಇಸ್ಲಾಂ ಎಂಬ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಇನ್ನೊಂದೆಡೆ ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ವೇಳೆ ಪೊಲೀಸರೊಂದಿಗೆ ಚಕಮಕಿ ನಡೆಸುವಾಗ 28 ವರ್ಷದ ಪ್ರಭಾತ್ ಪಾಂಡೆ ಎಂಬ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ. ಈ ಘಟನೆಗೆ ಬಿಜೆಪಿ ಸರ್ಕಾರವೇ ಕಾರಣ ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.