ಬಿಹಾರ: ತಾನು ಆರು ತಿಂಗಳಿನಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದೇನೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಸುಶೀಲ್ ಮೋದಿ ಹೇಳಿದ್ದಾರೆ.
ಜನರಿಗೆ ನನ್ನ ಆರೋಗ್ಯದ ಬಗ್ಗೆ ಹೇಳುವ ಸಮಯ ಬಂದಿದೆ ಎಂದು ನಾನು ಭಾವಿಸಿದ್ದೇನೆ. ಹೀಗಾಗಿ ಕ್ಯಾನ್ಸರ್‌ನಿಂದ ಬಳಲುತ್ತಿರುವ ವಿಚಾರವನ್ನು ತಿಳಿಸುತ್ತಿದ್ದೇನೆ. ನನ್ನ ಆರೋಗ್ಯಕ್ಕೆ ಸಂಬಂಧಿಸಿದ ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹಂಚಿಕೊಂಡಿದ್ದೇನೆ. ದೇಶಕ್ಕೆ, ಬಿಹಾರ ಮತ್ತು ಬಿಜೆಪಿಗೆ ಯಾವಾಗಲೂ ಕೃತಜ್ಞನಾಗಿರುತ್ತೇನೆ ಎಂದು 72 ವರ್ಷದ ಸುಶೀಲ್ ಮೋದಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಫೆಬ್ರವರಿಯಲ್ಲಿ ಬಿಜೆಪಿ ರಾಜ್ಯಸಭಾ ಚುನಾವಣೆಗೆ ಬಿಹಾರದ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿತ್ತು. ಇದರಲ್ಲಿ ಸುಶೀಲ್ ಮೋದಿ ಅವರ ಹೆಸರಿರಲಿಲ್ಲ. ಇದು ರಾಜಕೀಯ ವಲಯದಲ್ಲಿ ಅನೇಕ ಉಹಾಪೋಹಗಳಿಗೆ ಕಾರಣವಾಗಿತ್ತು.
ಇನ್ನು ಸುಶೀಲ್ ಮೋದಿ ಅವರ ಈ ಹೇಳಿಕೆಗೆ ಬಿಜೆಪಿ ನಾಯಕ ಮತ್ತು ಪಕ್ಷದ ಸಂಸದ ರವಿಶಂಕರ್ ಪ್ರಸಾದ್ ಪ್ರತಿಕ್ರಿಯಿಸಿ, ʼಈ ಸುದ್ದಿ ಕೇಳಿ ತೀವ್ರ ನೋವು ಉಂಟಾಗಿದೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿʼ ಎಂದು ಹಾರೈಸಿದ್ದಾರೆ.
ಬಿಹಾರ ರಾಜಕೀಯದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿರುವ ಸುಶೀಲ್ ಮೋದಿ ಅವರು ಸಂಸತ್ತಿನ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿಯಾಗಿ ಮಾತ್ರವಲ್ಲದೆ ರಾಜ್ಯದ ಹಣಕಾಸು ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಇತ್ತೀಚೆಗೆ ಬಿಜೆಪಿ ಪ್ರಕಟಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದ 27 ಸದಸ್ಯರ ಚುನಾವಣಾ ಪ್ರಣಾಳಿಕೆ ಸಮಿತಿಯಲ್ಲಿ ಸುಶೀಲ್ ಕುಮಾರ್ ಮೋದಿ ಅವರು ಕೂಡ ಇದ್ದಾರೆ. ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಕೂಡ ಈ ಸಮಿತಿಯಲ್ಲಿ ಸಂಚಾಲಕರು ಮತ್ತು ಸಹ ಸಂಚಾಲಕರಾಗಿರುತ್ತಾರೆ.<>