ನವದೆಹಲಿ: ಇದೇ ಚಳಿಗಾಲದ ಅಧಿವೇಶನದಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಂಡಿಸಲು ಸಿದ್ಧತೆ ನಡೆಸಿದೆ ಎಂದು ಡಿ. 9ರಂದು ವರದಿಯಾಗಿತ್ತು.
ಇದೀಗ ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟವು ಗುರುವಾರ ಒಪ್ಪಿಗೆ ಸೂಚಿಸಿದೆ.
ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಯ ಬಗ್ಗೆ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿ ಸರ್ಕಾರಕ್ಕೆ ಶಿಫಾರಸುಗಳನ್ನು ಸಲ್ಲಿಸಿತ್ತು. ಇದನ್ನು ಕೇಂದ್ರ ಸರ್ಕಾರ ಅಂಗೀಕರಿಸಿತ್ತು.
ಅದರಂತೆ ಮೊದಲ ಹಂತವಾಗಿ, ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕು ಎಂದು ಸಮಿತಿಯು ಶಿಫಾರಸು ಮಾಡಿದೆ. ಮುಂದಿನ ಹಂತದಲ್ಲಿ, ನಗರ ಪಾಲಿಕೆಗಳು ಹಾಗೂ ಪಂಚಾಯಿತಿಗಳಿಗೆ 100 ದಿನಗಳ ಒಳಗಾಗಿ ಚುನಾವಣೆ ನಡೆಸಬೇಕು ಎಂದು ಅದು ಹೇಳಿದೆ.