ಲಕ್ನೋ : ರಾಜ್ಯದಲ್ಲಿ ಮಾನ್ಯತೆ ಪಡೆಯದ ಮದರಸಾಗಳಲ್ಲಿರುವ ಶಿಕ್ಷಕರ ಸಂಖ್ಯೆ, ಪಠ್ಯಕ್ರಮ ಮತ್ತು ಅಲ್ಲಿ ಲಭ್ಯವಿರುವ ಮೂಲಸೌಕರ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಉತ್ತರ ಪ್ರದೇಶ ಸರ್ಕಾರ ಸಮೀಕ್ಷೆ ನಡೆಸಲು ಮುಂದಾಗಿದೆ.
ಈ ಕುರಿತಂತೆ ಪ್ರತಿಕ್ರಿಯಿಸಿರುವ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಡ್ಯಾನಿಶ್ ಆಜಾದ್ ಅನ್ಸಾರಿ ಅವರು, ಮದರಸಾಗಳಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ಮೂಲ ಸೌಕರ್ಯಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್ಸಿಪಿಸಿಆರ್) ಅಗತ್ಯಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ಸಮೀಕ್ಷೆ ನಡೆಸಲಿದೆ ಎಂದು ತಿಳಿಸಿದ್ದಾರೆ.
ಶೀಘ್ರದಲ್ಲೇ ಸಮೀಕ್ಷೆ ಆರಂಭವಾಗಲಿದೆ. ಸಮೀಕ್ಷೆ ವೇಳೆ ಮದರಸಾದ ಹೆಸರು ಮತ್ತು ಅದನ್ನು ನಿರ್ವಹಿಸುವ ಸಂಸ್ಥೆ, ಅದು ಖಾಸಗಿ ಅಥವಾ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆಯೋ, ಅಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಕುಡಿಯುವ ನೀರು, ಶೌಚಾಲಯ, ಪೀಠೋಪಕರಣಗಳು ಮತ್ತು ವಿದ್ಯುತ್ ಸರಬರಾಜು ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.
ಜೊತೆಗೆ ಮದರಸಾದಲ್ಲಿರುವ ಶಿಕ್ಷಕರ ಸಂಖ್ಯೆ, ಪಠ್ಯಕ್ರಮ, ಆದಾಯದ ಮೂಲ ಮತ್ತು ಯಾವುದೇ ಸರ್ಕಾರೇತರ ಸಂಸ್ಥೆ (ಎನ್ಜಿಒ)ಯೊಂದಿಗೆ ಹೊಂದಿರುವ ಸಂಬಂಧದ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ ಎಂದಿದ್ದಾರೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!