ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪ ಅವರ ಜನಪ್ರಿಯತೆ ಮೇಲೆ ಅಕ್ಟೋಬರ್ 30 ರಂದು ನಡೆಯುವ ಸಿಂದಗಿ ಮತ್ತು ಹಾನಗಲ್ ಉಪ ಚುನಾವಣೆಯನ್ನು ಗೆಲ್ಲುವ ಭರವಸೆಯಲ್ಲಿದೆ ಬಿಜೆಪಿ.
70 ವರ್ಷದ ಲಿಂಗಾಯತ ಪ್ರಭಾವಿ ನಾಯಕ ಯಡಿಯೂರಪ್ಪ ಅವರು ಉಪಚುನಾವಣೆ ಅಭ್ಯರ್ಥಿ ಪರ ಪ್ರಚಾರ ನಡೆಸಿದರೇ ಲಿಂಗಾಯತ ಸಮುದಾಯದ ಮತದಾರರೇ ಅಧಿಕವಾಗಿರುವ ಎರಡು ಕ್ಷೇತ್ರಗಳಲ್ಲಿ ಗೆಲುವು ಖಚಿತ ಎಂದು ಹಲವರು ನಂಬಿದ್ದಾರೆ.
ಇನ್ನೂ ಟಿಕೆಟ್ ಆಕಾಂಕ್ಷಿಗಳು ಕೂಡ ಯಡಿಯೂರಪ್ಪ ಅವರ ಮನೆ ಬಾಗಿಲು ತಟ್ಟುತ್ತಿದ್ದು, ಪ್ರಚಾರಕ್ಕೆ ಬರುವಂತೆ ಮನವಿ ಮಾಡುತ್ತಿದ್ದಾರೆ. ಹಾನಗಲ್ ಮತ್ತು ಸಿಂದಗ ಕ್ಷೇತ್ರಗಳಲ್ಲಿ ಗೆಲ್ಲಲೇ ಬೇಕೆಂದು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದೆ.
ಇತ್ತೀಚೆಗೆ ದಾವಣಗೆರೆಯಲ್ಲಿ ನಡೆಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಎರಡು ಕ್ಷೇತ್ರಗಳನ್ನು ಗೆಲ್ಲುವ ಸಂಬಂಧ ನಾಯಕರು ಯೋಜನೆ ರೂಪಿಸಿದ್ದಾರೆ, ರಾಜ್ಯ ವಿಧಾನಸಭೆ ಚುನಾವಣೆಗೆ ಕೇವಲ 18 ತಿಂಗಳು ಮಾತ್ರ ಬಾಕಿ ಉಳಿದಿದ್ದು, ಉಪ ಚುನಾವಣೆಯಲ್ಲಿ ಸೋತರೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂಬ ಆತಂಕದಲ್ಲಿದೆ ಬಿಜೆಪಿ.
ಸಿಎಂ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯಲ್ಲಿರುವ ಹಾನಗಲ್ ವಿಧಾನ ಸಭಾ ಕ್ಷೇತ್ರ ಗೆಲ್ಲುವುದು ಅನಿವಾರ್ಯ, ಇದು ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯ ವಿಷಯವಾಗಿದೆ, ಅಭ್ಯರ್ಥಿ ಘೋಷಣೆಯಾದ ನಂತರ ಸಂಪುಟ ಸಹೋದ್ಯೋಗಿಗಳು ಪ್ರಚಾರ ಕೈಗೊಳ್ಳಲಿದ್ದಾರೆ.
ಸಿಂದಗಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ಭೂಸನೂರು ಕಣಕ್ಕಿಳಿಯುವ ಸಾಧ್ಯತೆಯಿದೆ.ಇನ್ನೂ ಹಾನಗರ್ ಕ್ಷೇತ್ರಕ್ಕೆ ಗದಗ ಸಂಸದ ಶಿವಕುಮಾರ್ ಉದಾಸಿ ಪತ್ನಿ ರೇವತಿ ಉದಾಸಿ ಅವರನ್ನು ಕಣಕ್ಕಿಳಿಸಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿವೆ.
ಒಂದು ವೇಳೆ ಯಡಿಯೂರಪ್ಪ ಅವರು ಉಪ ಚುನಾವಣೆ ಪ್ರಚಾರಕ್ಕೆ ಬಾರದಿದ್ದರೇ ಜನತೆಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ಮತ್ತು ಇದು ವಿರೋಧ ಪಕ್ಷಗಳ ಬಾಯಿಗೆ ಆಹಾರವಾಗುತ್ತದೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.
ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗಿಳಿದಿರಬಹುದು, ಆದರೆ ಅವರು ಪಕ್ಷಕ್ಕೆ ಅನಿವಾರ್ಯ, ಕೇವಲ 10 ನಿಮಿಷಗಳ ಭಾಷಣ ಮಾಡಿದರೂ ಪಕ್ಷಕ್ಕೆ ಸಹಾಯವಾಗಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಸಿಂದಗಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ರಮೇಶ್ ಭೂಸನೂರು ತಮ್ಮ ಪರ ಪ್ರಚಾರ ಮಾಡುವಂತೆ ಯಡಿಯೂರಪ್ಪ ಅವರಿಗೆ ಒತ್ತಾಯಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಯಡಿಯೂರಪ್ಪ, ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯ ಮುಖ್ಯಸ್ಥ ನಳಿನ್ ಕುಮಾರ್ ಕಟೀಲ್ ಅವರ ಸಾಮೂಹಿಕ ನಾಯಕತ್ವದಲ್ಲಿ ಉಪಚುನಾವಣೆ ಎದುರಿಸುವುದಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಹೇಳಿದ್ದಾರೆ.