ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎಎಪಿ ಪಕ್ಷವು ರಾಜಕೀಯ ಕಾರ್ಯತಂತ್ರ ರೂಪಿಸಿದ್ದು, ಅದರಂತೆ 18 ವರ್ಷ ಮೇಲ್ಪಟ್ಟ ಎಲ್ಲಾ ಹೆಣ್ಣು ಮಕ್ಕಳು ಹಾಗೂ ಮಹಿಳೆಯರಿಗೆ ಮಾಸಿಕ ₹1,000 ಒದಗಿಸುವ ಯೋಜನೆ ಪ್ರಾರಂಭವಾಗಲಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾಳೆಯಿಂದ (ಡಿ.23) ಈ ಯೋಜನೆಗೆ ಚಾಲನೆ ದೊರೆಯಲಿದ್ದು, ಮಹಿಳೆಯರು ಅರ್ಜಿ ಸಲ್ಲಿಸಲು ಎಲ್ಲಿಯೂ ಹೋಗಬೇಕಿಲ್ಲ. ನಮ್ಮ ಸ್ವಯಂ ಸೇವಕರು ನಿಮ್ಮ ಮನೆ ಬಾಗಿಲಿಗೆ ಬಂದು ನೋಂದಾಯಿಸಿಕೊಳ್ಳುತ್ತಾರೆ. ಅರ್ಹತಾ ಗುರುತಿನ ಚೀಟಿ ತೋರಿಸಿ ಎಲ್ಲಾ ಮಹಿಳೆಯರು ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು ಎಂದರು.
2024-25ರ ಬಜೆಟ್‌ನಲ್ಲಿ ದೆಹಲಿ ಸರ್ಕಾರವು 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ ಮಾಸಿಕ ₹1,000 ನೀಡುವ ಯೋಜನೆ ಘೋಷಿಸಿತ್ತು. ಇತ್ತೀಚೆಗೆ ಚುನಾವಣಾ ಪ್ರಚಾರದಲ್ಲಿ ತಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಈ ಮೊತ್ತವನ್ನು ₹2,100ಕ್ಕೆ ಹೆಚ್ಚಿಸಲಾಗುವುದು ಎಂದು ಕೇಜ್ರಿವಾಲ್ ಭರವಸೆ ನೀಡಿದ್ದರು.
ಅದಲ್ಲದೆ ಎಎಪಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಸಂಜೀವಿನಿ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದರು. ಈ ಯೋಜನೆಯನ್ನು 60 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಇದರ ಸದುಪಯೋಗ ಪಡೆಯಬಹುದಾಗಿದೆ ಎಂದರು.