ನವದೆಹಲಿ: ಕೊಲೆ ಪ್ರಕರಣದಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರಿಗೆ ದೆಹಲಿ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ರಾಷ್ಟ್ರೀಯ ಜೂನಿಯರ್ ಕುಸ್ತಿ ಚಿನ್ನದ ಪದಕ ವಿಜೇತ ಸಾಗರ್ ಧಂಖರ್ ಅವರ ಕೊಲೆ ಆರೋಪದ ಮೇಲೆ ಜೈಲಿನಲ್ಲಿದ್ದ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರಿಗೆ ಹೈಕೋರ್ಟ್ ನಿಯಮಿತ ಜಾಮೀನು ಮಂಜೂರು ಮಾಡಿದೆ.
ಕೊಲೆ ಪ್ರಕರಣದಡಿ 2021ರ ಜೂನ್ 2ರಂದು ಸುಶೀಲ್ ಕುಮಾರ್ ಅವರನ್ನು ಬಂಧಿಸಲಾಗಿತ್ತು. 2023ರ ಜುಲೈನಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಅವರಿಗೆ 7 ದಿನಗಳ ಮಧ್ಯಂತರ ಜಾಮೀನು ನೀಡಲಾಗಿತ್ತು. ಇದಾದ ಬಳಿಕ ಮತ್ತೆ ಜೈಲು ಪಾಲಾಗಿದ್ದರು.
ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ 2021ರ ಮೇ 4ರಂದು ದೆಹಲಿಯ ಛತ್ರಸಾಲ್ ಕ್ರೀಡಾಂಗಣದ ಪಾರ್ಕಿಂಗ್ ಸ್ಥಳದಲ್ಲಿ ಸಾಗರ್ ಧಂಖರ್ ಮತ್ತು ಅವರ ಸ್ನೇಹಿತರಾದ ಜೈ ಭಗವಾನ್ ಮತ್ತು ಭಗತ್ ಮೇಲೆ ಸುಶೀಲ್ ಕುಮಾರ್ ಅವರು ಹಲ್ಲೆ ನಡೆಸಿದ್ದಾರೆಂಬ ಆರೋಪವಿದೆ. ಈ ದಾಳಿಯಲ್ಲಿ ಗಾಯಗೊಂಡಿದ್ದ ಸಾಗರ್ ಧಂಖರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಸುಶೀಲ್ ಕುಮಾರ್ ಅವರು 2008 ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದಿದ್ದರು. 2012 ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದರು. ಹೀಗೆ ಸತತ ಎರಡು ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಸುಶೀಲ್ ಕುಮಾರ್ ಪಾತ್ರರಾಗಿದ್ದರು.