ಬೆಂಗಳೂರು: ಭಾರತದ ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರ ಮುತುವರ್ಜಿಯಲ್ಲಿ ಇದೇ ಶನಿವಾರ ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಸಜ್ಜಾಗಿದೆ.
ಸತತ ಎರಡು ಬಾರಿ ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತ, ವಿಶ್ವ ಚಾಂಪಿಯನ್ ಜಾವೆಲಿನ್ ಪಟು ನೀರಜ್ ಚೋಪ್ರಾ ಅವರು ಬೆಂಗಳೂರಿನಲ್ಲಿ ಬೀಡುಬಿಟ್ಟಿದ್ದು, ಗುರುವಾರ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿ, ಜಾವೆಲಿನ್ ಸ್ಪರ್ಧೆಯ ಕುರಿತು ಮಾಹಿತಿ ನೀಡಿದರು.
ಇದೇ ವೇಳೆ ನೀರಜ್ ಚೋಪ್ರಾ ಅವರಿಗೆ ಹಾರ ಹಾಕಿ, ಶಾಲು ಹೊದಿಸಿ ಮುಖ್ಯಮಂತ್ರಿಗಳು ಸನ್ಮಾನಿಸಿದರು.
ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರು ಉಪಸ್ಥಿತರಿದ್ದರು. ಅಂದಹಾಗೆ ಜುಲೈ 5ರಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ.
ಜುಲೈ 5ರಂದು ನಡೆಯಲಿರುವ ಜಾಗತಿಕ ಮಟ್ಟದ ನೀರಜ್ ಚೋಪ್ರಾ ಕ್ಲಾಸಿಕ್ ಸ್ಪರ್ಧೆಗೆ ಕಂಠೀರವ ಕ್ರೀಡಾಂಗಣ ಆತಿಥ್ಯ ವಹಿಸಿದೆ. ನೀರಜ್ ಜೊತೆಗೆ ಅಂತಾರಾಷ್ಟ್ರೀಯ ಜಾವೆಲಿನ್ ತಾರೆಗಳಾದ ಜೂಲಿಯಸ್ ಯೆಗೊ ಮತ್ತು ಥಾಮಸ್ ರೋಹ್ಲರ್ ಸ್ಪರ್ಧೆಯಲ್ಲಿರುವ ಪ್ರಧಾನ ಆಕರ್ಷಣೆಯಾಗಿದ್ದಾರೆ. ಆದರೆ ಗಾಯದ ಸಮಸ್ಯೆಯಿಂದಾಗಿ ಆ್ಯಂಡರ್ಸನ್ ಪೀಟರ್ ಹಿಂದೆ ಸರಿದಿದ್ದಾರೆ.
ನೀರಜ್ ಚೋಪ್ರಾ ಕ್ಲಾಸಿಕ್ ಸ್ಪರ್ಧೆ ವೀಕ್ಷಣೆಗೆ ₹ 200ರಿಂದ 6,000ರ ವರೆಗೂ ಟಿಕೆಟ್ ದರವನ್ನು ನಿಗದಿಪಡಿಸಲಾಗಿದೆ. ಸುಮಾರು 30 ಸಾವಿರಕ್ಕೂ ಅಧಿಕ ಆಸನಗಳ ಸಾಮರ್ಥ್ಯವಿದ್ದು, ಸದ್ಯ 6 ಸಾವಿರ ಟಿಕೆಟ್‌ಗಳು ಮಾರಾಟವಾಗಿ ಎಂದು ಮೂಲಗಳು ತಿಳಿಸಿವೆ. ಭಾರತದಲ್ಲಿ ಇದೇ ಮೊದಲ ಬಾರಿ ಈ ಸ್ಪರ್ಧೆ ಆಯೋಜಿಸಲಾಗಿದೆ.