Publish Date: Mon, 20 Mar 2023 (07:08 IST)
Updated Date: Mon, 20 Mar 2023 (09:14 IST)
ಬೆಂಗಳೂರು : ನಗರದಲ್ಲಿ ಅಕ್ರಮ ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ಪಟ್ಟು ಹಿಡಿದಿರುವ ಆಟೋ ಚಾಲಕರು ಮತ್ತು ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆಯನ್ನು ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಿದ್ದಾರೆ.
ಸೋಮವಾರ ಮಧ್ಯರಾತ್ರಿಯವರೆಗೆ ಬೆಂಗಳೂರಿನಲ್ಲಿ ಆಟೋರಿಕ್ಷಾ ಬಂದ್ ನಡೆಸಲು ನಿರ್ಧರಿಸಿದ್ದಾರೆ. ಸುಮಾರು 2 ಲಕ್ಷಕ್ಕೂ ಅಧಿಕ ಆಟೋಗಳು ಬಂದ್ಗೆ ಬೆಂಬಲ ನೀಡಿವೆ. ಆಟೋ ಸೇವೆ ಬಂದ್ನಿಂದಾಗಿ ಪ್ರಯಾಣಿಕರು ನಗರದಲ್ಲಿ ಸಂಚರಿಸಲು ಬಿಎಂಟಿಸಿ ಬಸ್, ಮೆಟ್ರೋ, ಖಾಸಗಿ ವಾಹನ, ಟ್ಯಾಕ್ಸಿ ಹಾಗೂ ಓಲಾ, ಊಬರ್ ವಾಹನಗಳನ್ನು ಹೆಚ್ಚಾಗಿ ಅವಲಂಬಿಸಬೇಕಾಗಿದೆ.
ಬೈಕ್ ಟ್ಯಾಕ್ಸಿಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಸರ್ಕಾರಕ್ಕೆ ಆಟೋ ಚಾಲಕರು ಕೊಟ್ಟ ಗಡುವು ಮುಗಿದಿದೆ. ಹೀಗಾಗಿ ಇಂದು ಬೆಳಗ್ಗೆ 11 ಗಂಟೆ ನಂತರ ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಸೋಮವಾರ ಬೆಳಗ್ಗೆ 11ಕ್ಕೆ ಸಂಗೊಳ್ಳಿ ಕ್ರಾಂತಿವೀರ ರಾಯಣ್ಣ ರೈಲ್ವೆ ನಿಲ್ದಾಣದ ಬಳಿಯಿಂದ ಚಾಲಕರು ಪಾದಯಾತ್ರೆ ಮೂಲಕ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವುದಾಗಿ ಆಟೋ ಚಾಲಕರ ಸಂಘಟನೆಗಳ ಒಕ್ಕೂಟ ತಿಳಿಸಿದೆ.