ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಸಿಂಚನ ಮುಂದುವರಿಕೆಯಾಗಿದ್ದು, ರಾಜ್ಯದ ಕರಾವಳಿ ಸೇರಿದಂತೆ ಹಲವು ಭಾಗಗಳಲ್ಲಿ ವರುಣಾರ್ಭಟ ಮುಂದುವರಿಯುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನಿಡಿದೆ.
ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ ಸಿಕ್ಕಿದ್ದು, ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಮುಂದುವರಿಕೆಯಾಗಿದೆ. ಇನ್ನು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಮಲೆನಾಡು ಭಾಗದ ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ ಜಿಲ್ಲೆಗಳಿಗೆ ಆರೆಂಜ್, ಧಾರವಾಡ, ಕಲಬುರಗಿ, ರಾಯಚೂರು ಹಾಗೂ ಗದಗ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಪ್ರದೇಶಗಳಲಿ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಇಂದು ಮತ್ತು ಶುಕ್ರವಾರ ಮೊಡಕವಿದ ವಾತಾವರಣ ಇರಲಿದ್ದು, ಇಂದು ಮತ್ತು ನಾಳೆ ಗುಡುಗು ಮಿಂಚಿನ ಸಮೇತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.