ಇದೀಗ ಕೋವಿಡ್ ಕೇಸ್ಗಳು ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆ ಹಲವು ರಾಜ್ಯಗಳು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಹರ್ಯಾಣ ಸರ್ಕಾರವು ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ.
ರಾಜ್ಯದ ಆರೋಗ್ಯ ಇಲಾಖೆಯು ಕೋವಿಡ್ ಸೂಕ್ತ ನಡವಳಿಕೆಯನ್ನು ಅಳವಡಿಸಿಕೊಳ್ಳುವಂತೆ ಸಾರ್ವಜನಿಕರನ್ನು ಒತ್ತಾಯಿಸಿದೆ. ಇದನ್ನು ರಾಜ್ಯದ ಎಲ್ಲಾ ಭಾಗಗಳಲ್ಲಿ ಅನುಷ್ಠಾನಗೊಳಿಸುವಂತೆ ಜಿಲ್ಲಾಡಳಿತ ಮತ್ತು ಪಂಚಾಯಿತಿಗಳಿಗೆ ಸೂಚನೆ ನೀಡಲಾಗಿದೆ.
ಕೇರಳದಲ್ಲಿ ಗರ್ಭಿಣಿಯರು, ವೃದ್ಧರು ಮತ್ತು ಅನಾರೋಗ್ಯಕ್ಕೊಳಗಾದವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಲು ಉನ್ನತ ಮಟ್ಟದ ಸಭೆ ನಡೆಸಿದ ನಂತರ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್,
ಕೋವಿಡ್ ಸಂಬಂಧಿತ ಸಾವುಗಳು 60 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಮತ್ತು ಮಧುಮೇಹದಂತಹ ಕಾಯಿಲೆ ಇರುವವರಲ್ಲಿ ಹೆಚ್ಚಾಗಿ ವರದಿಯಾಗಿವೆ ಎಂದು ಹೇಳಿದರು. ಆರೋಗ್ಯ ಇಲಾಖೆಗೆ ಆಮ್ಲಜನಕದ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸೂಚಿಸಿದ್ದು, ಶೀಘ್ರದಲ್ಲೇ ಖಾಸಗಿ ಆಸ್ಪತ್ರೆಗಳ ವಿಶೇಷ ಸಭೆ ನಡೆಸಲಾಗುವುದು ಎಂದು ಹೇಳಿದ್ದಾರೆ.