ಕರ್ನಾಟಕದ ಇಬ್ಬರಿಗೆ ಒಮಿಕ್ರಾನ್ ರೂಪಾಂತರದ ಸೋಂಕು ದೃಢಪಟ್ಟಿರುವ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಒಮಿಕ್ರಾನ್ ಹರಡಿದ್ದರೂ ದೊಡ್ಡಮಟ್ಟದ ಆತಂಕವಿಲ್ಲ. ಕೇಂದ್ರ ಆರೋಗ್ಯ ಸಚಿವರೊಂದಿಗೆ ಈ ಕುರಿತು ಸ್ವತಃ ಚರ್ಚಿಸಿದ್ದೇನೆ. ಬೆಂಗಳೂರಿಗೆ ಹಿಂದಿರುಗಿದ ತಜ್ಞರ ಜತೆ ತುರ್ತು ಸಭೆ ಮಾಡಿ ಚರ್ಚೆ ನಡೆಸುತ್ತೇನೆ. ನಂತರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ.
ಕರ್ನಾಟಕದ ಒಮಿಕ್ರಾನ್ ಸ್ಥಿತಿಗತಿಯ ಬಗ್ಗೆ ನಾಳೆ ಸಂಪೂರ್ಣ ವಿವರ ನೀಡುವುದಾಗಿ ಹೇಳಿದ್ದಾರೆ. ಕೊವಿಡ್ ಎದುರಿಸಿದ ರೀತಿಯಲ್ಲಿಯೇ ಒಮಿಕ್ರಾನ್ ಪರಿಸ್ಥಿತಿಯನ್ನೂ ನಿಭಾಯಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಇಬ್ಬರಿಗೆ ಒಮಿಕ್ರಾನ್ ದೃಢಪಟ್ಟಿದೆ. ಆದರೆ ಈ ಬಗ್ಗೆ ಅಧಿಕೃತವಾಗಿ ಯಾವುದೇ ವಿವರ ಸಿಕ್ಕಿಲ್ಲ. ನಮ್ಮ ಆರೋಗ್ಯ ಸಚಿವರು ಮತ್ತು ಮುಖ್ಯ ಕಾರ್ಯದರ್ಶಿಯೊಂದಿಗೆ ನಾನು ಚರ್ಚಿಸಿದೆ. ಕೇಂದ್ರ ಸರ್ಕಾರದಿಂದ ಅಗತ್ಯ ಮಾಹಿತಿ ಪಡೆಯಲು ಸೂಚಿಸಿದ್ದೇನೆ. ನಾಳೆ (ನ.3) ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿ ತಜ್ಞರ ಜತೆ ತುರ್ತು ಸಭೆ ನಡೆಯಲಿದೆ.