ಬೆಂಗಳೂರು(ಅ.10) : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ 19 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಅಂದರೆ ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಕಡೆ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಅಲ್ಲದೇ, ಅ.12 ಮತ್ತು 13ರಂದು ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ಎಲ್ಲೆಲ್ಲಿ ಮಳೆ ಸಾಧ್ಯತೆ?
ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಲಿದ್ದು, ಮುಂದಿನ ೨೪ ಗಂಟೆಗಳಲ್ಲಿ ರಾಜ್ಯಾದ್ಯಂತ ಹಲವು ಕಡೆ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.