Publish Date: Wed, 25 Aug 2021 (08:57 IST)
Updated Date: Wed, 25 Aug 2021 (09:00 IST)
Karnataka Rains Today:(ಆ.25): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆ ಮುಂದುವರೆಯಲಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹಮಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ವರುಣನ ಅಬ್ಬರ ಮುಂದುವರೆದಿದೆ. ಕೆಲವೆಡೆ ಜಿಟಿ ಜಿಟಿ ಮಳೆಯಾದರೆ, ಇನ್ನೂ ಕೆಲವೆಡೆ ಧಾರಾಕಾರ ಮಳೆ ಸುರಿದಿದೆ. ಸಕಾಲಕ್ಕೆ ಸುರಿಯುತ್ತಿರುವ ಮಳೆಯಿಂದಾಗಿ ಬಿತ್ತನೆ ಕಾರ್ಯ ಮಾಡಿದ್ದ ರೈತರ ಮೊಗದಲ್ಲಿ ಹರ್ಷ ಮೂಡಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ. ಅಂದರೆ ಆಗಸ್ಟ್ 27ವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇಂದಿನಿಂದ 3 ದಿನ ಮಳೆಯಾಗಲಿದೆ. ಪ್ರಮುಖವಾಗಿ ರಾಜ್ಯದ 9 ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆಯಾಗಲಿದೆ.
ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಅದರಲ್ಲೂ ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ರಾಯಚೂರು, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಪ್ಪಳ, ಯಾದಗಿರಿಯಲ್ಲಿ ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.