ನವದೆಹಲಿ, ಜು. 9: ಬೆಂಗಳೂರಿನ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಯನ್ನು ಆರಂಭಿಸಿತ್ತು. ಆದರೆ, ಈ ಯೋಜನೆಯ ಮೂಲಕ ತಮಿಳುನಾಡಿನ ನೀರಿನ ಪಾಲಿಗೆ ಕುತ್ತಾಗಲಿದೆ.
ಅಲ್ಲಿನ ರೈತರಿಗೆ ಅನ್ಯಾಯವಾಗಲಿದೆ ಎಂಬುದು ತಮಿಳುನಾಡಿನ ಆರೋಪ. ಇದೇ ಕಾರಣಕ್ಕೆ ತಮಿಳುನಾಡು ಸರ್ಕಾರ ಕಳೆದ ಒಂದು ದಶಕಗಳಿಂದ ಯೋಜನೆಯ ವಿರುದ್ಧ ದ್ವನಿ ಎತ್ತುತ್ತಿದೆ. ಈಗ ಕೇಂದ್ರ ಸರ್ಕಾರದ ಮೇಲೆ ಮತ್ತಷ್ಟು ಒತ್ತಡ ಹೇರಲು ಜುಲೈ 12ರಂದು ತಮಿಳುನಾಡು ಸರ್ಕಾರ ಅಲ್ಲಿನ ಸರ್ವ ಪಕ್ಷಗಳ ಸಭೆ ಕರೆದಿದೆ.
(ಜುಲೈ 7ರಂದು) ತಮಿಳುನಾಡಿನ ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್ ಅವರು ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆಯನ್ನು ತಡೆಯುವಂತೆ ಮನವಿ ಸಲ್ಲಿಸಿದ್ದರು. ಭೇಟಿ ವೇಳೆ "ಯೋಜನೆ ಬಗೆಗಿನ ವ್ಯಾಜ್ಯ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿದೆ.ಸುಪ್ರೀಂ ಕೋರ್ಟ್ ತೀರ್ಪು ನೀಡುವರೆಗೆ ಯೋಜನೆಗೆ ಅನುಮತಿ ಕೊಡಬೇಡಿ. ಕರ್ನಾಟಕ ತರಾತುರಿಯಲ್ಲಿ ಯೋಜನೆ ಆರಂಭಿಸುತ್ತಿದೆ. ಈ ಯೋಜನೆ ಆರಂಭವಾದರೆ ಎರಡೂ ರಾಜ್ಯಗಳ ಗಡಿಯಲ್ಲಿ ಮತ್ತೆ ಸಮಸ್ಯೆ ಉಲ್ಬಣವಾಗುತ್ತದೆ. ತಮಿಳುನಾಡಿನ ರೈತರಿಗೆ ಅನ್ಯಾಯವಾಗಲಿದೆ" ಎಂದು ದೊರೈ ಮುರುಗನ್ ಅವರು ದೂರು ನೀಡಿದ್ದರು ಎನ್ನಲಾಗಿದೆ.