Publish Date: Mon, 13 Sep 2021 (10:20 IST)
Updated Date: Mon, 13 Sep 2021 (10:23 IST)
ಬೆಂಗಳೂರು, ಸೆ 13 : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರುದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡು, ಕರಾವಳಿ, ಕೊಡಗು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಜಲಾಶಯಗಳಿಗೆ ಒಳಹರಿವು ಸಹ ಹೆಚ್ಚಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು ಉಷ್ಣಾಂಶ 22 ಡಿಗ್ರಿಗೆ ಕುಸಿದಿದೆ. ನಗರದಲ್ಲಿ ಭಾನುವಾರ ಸಂಜೆ ವೇಳೆಗೆ ಕೆಲವು ಬಡಾವಣೆಗಳಲ್ಲಿ ತುಂತುರು ಮಳೆಯಾಗಿದೆ. ತಂಪಾದ ಗಾಳಿ ಬೀಸುತ್ತಿದ್ದು, ಆಗಾಗ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಇನ್ನೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರ ತನಕ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.