ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು (ನ.8) ಮತ್ತು ನಾಳೆ (ನ.9) ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಜ್ಞರು ಮಾಹಿತಿ ನೀಡಿದ್ದಾರೆ.
ಮಂಗಳವಾರದ ಬಳಿಕ ರಾಜ್ಯದಲ್ಲಿ ಮಳೆ ಕಡಿಮೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸದ್ಯ ಬೆಳಿಗ್ಗೆಯಿಂದ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ಇನ್ನು ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಜೋರು ಮಳೆ ಸುರಿಯುತ್ತಿದೆ.